*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್* ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ.

*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್*
 ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಜೆಡಿಎಸ್‌ ಯುವ ನಾಯಕ ಪ್ರಜ್ವಲ್‌ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್‌) ನ್ಯಾಯಾಲಯ ಶನಿವಾರ (ಆ.2) ಆದೇಶಿಸಿದೆ.

ಪ್ರಕರಣದಲ್ಲಿ ಪ್ರಜ್ವಲ್ ಅಪರಾಧಿ ಎಂದು ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ಶುಕ್ರವಾರ ಘೋಷಿಸಿದ್ದರು.

2024ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರನ್ನು ಪ್ರಭಾವ ಬಳಸಿ ಬೆದರಿಸಿ, ಅವರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಹಲವು ವಿಡಿಯೋಗಳು ವೈರಲ್ ಆಗಿತ್ತು.

ಅತ್ಯಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ 2024ರ ಏಪ್ರಿಲ್‌ 28ರಂದು ಪ್ರಜ್ವಲ್ ವಿರುದ್ದ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಮೈಸೂರಿನ ಕೆ.ಆರ್‌ ನಗರದ ಸಂತ್ರಸ್ತ ಮಹಿಳೆ ದೂರು ನೀಡಿದ್ದರು. ಈ ದೂರು ಅನುಸರಿಸಿ ಸೈಬರ್‌ ಅಪರಾಧ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 376(2)(ಎನ್‌), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಜ್ವಲ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.

ಬಳಿಕ ಈ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿತ್ತು. ಈ ತಂಡದ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2,000 ಪುಟಗಳ ಆರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿತ್ತು. 2024ರ ಅಂತ್ಯದಲ್ಲಿ ಈ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು.

PGK

Post a Comment

Previous Post Next Post